*ನಾಯಕರಿಂದ ಅವಮಾನ; ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲು ಪಿ.ಎಚ್. ನೀರಲಕೇರಿ ನಿರ್ಧಾರ*
ಧಾರವಾಡ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಹಂಚಿಕೆಯಲ್ಲಿ ಆದ ಅನ್ಯಾಯ ಹಾಗೂ ಕಾಂಗ್ರೆಸ್ ನ ಧಾರವಾಡದ ಕೆಲ ನಾಯಕರ ಹಾಗೂ ರಾಜ್ಯ ಮಟ್ಟದ ನಾಯಕರ ವರ್ತನೆಗಳಿಂದ ಬೇಸತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ಪಿ.ಎಚ್. ನೀರಲಕೇರಿ ಅವರು ತಿಳಿಸಿದ್ದಾರೆ.
ಈ ಕುರಿತು ಸೋಮವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಸಾರಿ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದೆ. ಆದರೆ, ಕಾಂಗ್ರೆಸ್ ನಾಯಕರು ಪಕ್ಷಕ್ಕಾಗಿ ದಶಕಗಳ ಕಾಲ ದುಡಿದುಕೊಂಡು ಬಂದಿದ್ದ ನಿಷ್ಠಾವಂತ ಕಾರ್ಯಕರ್ತನಾದ ನನ್ನನ್ನು ಸಂಪೂರ್ಣ ಕಡೆಗಣಿಸಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಸೌಜನ್ಯಕ್ಕೂ ಒಂದು ಮಾತು ನಮ್ಮನ್ನು ಸಂಪರ್ಕಿಸಿಲ್ಲ. ಇದನ್ನೆಲ್ಲ ನೋಡಿದರೆ ಕಾಂಗ್ರೆಸ್ ನಲ್ಲೂ ಟಿಕೆಟ್ ಗಳು ಮಾರಾಟವಾದವೇ? ಎಂಬ ಅನುಮಾನ ಬಂದಿದ್ದು ಇದು ನನ್ನನ್ನು ಜರ್ಜರಿತಗೊಳಿಸಿದೆ ಎಂದಿದ್ದಾರೆ.
ಕಳೆದ ಒಂದು ವರ್ಷದಿಂದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಸ್ಥಳೀಯ ಶಾಸಕ ಅರವಿಂದ ಬೆಲ್ಲದ ಅವರ ನಿಷ್ಕ್ರಿಯತೆ ಬಗ್ಗೆ ನಾನು ರಚನಾತ್ಮಕ ಹೋರಾಟ ಮಾಡಿಕೊಂಡು ಬಂದಿದ್ದೆ. ಅಷ್ಟೇ ಅಲ್ಲದೇ ಧಾರವಾಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಗುರುತಿನ ಚೀಟಿ ಹಗರಣದ ಬಗ್ಗೆ ನಿರಂತರ ಹೋರಾಟ ಮಾಡಿ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದೆ. ಇದರಿಂದ ಚುನಾವಣಾ ಆಯೋಗ ಬಿಗಿ ಕ್ರಮಗಳನ್ನು ಕೈಗೊಂಡಿತ್ತು ಎಂದಿದ್ದಾರೆ.
ಕಳೆದ ಐದು ವರ್ಷದಲ್ಲಿ ಬೆಲ್ಲದ ಅವರಿಂದ ಯಾವುದೇ ಕೆಲಸಗಳು ಆಗಿಲ್ಲ. ಕಾಲಹರಣ ಮಾಡಿದ್ದಾರೆ ಎಂಬುದನ್ನು ಸಾಕ್ಷಿ ಸಮೇತ ಜನರ ಮುಂದೆ ಇಟ್ಟಿದ್ದೆ. ಕ್ಷೇತ್ರದ ಜನರ ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ನೀಡಬೇಕು ಎಂದು ಗೋಗರೆದಿದ್ದೆ. ಆದರೆ, ಪಕ್ಷ ಇದನ್ನು ಎಳ್ಳಷ್ಟು ಪರಿಗಣಿಸದೇ ನನಗೆ ಸಂಪೂರ್ಣ ಅನ್ಯಾಯ ಮಾಡಿದೆ ಎಂದು ಆರೋಪಿಸಿದ್ದಾರೆ.
ಏತಕ್ಕಾಗಿ ಕಾಂಗ್ರೆಸ್ ರಾಜ್ಯ ನಾಯಕರು ಹೀಗೆ ಮಾಡಿದರು ಎಂದು ಅರ್ಥವಾಗುತ್ತಿಲ್ಲ. ಟಿಕೆಟ್ ಗಳನ್ನು ಮಾರಾಟ ಮಾಡಿದ್ದಾರೆ ಎಂದು ಜನ ಹಾದಿ ಬೀದಿಯಲ್ಲಿ ಆಡಿಕೊಳ್ಳುತ್ತಿದ್ದಾರೆ. ಟಿಕೆಟ್ ಗಳು ಮಾರಾಟ ಆಗುವುದಾದರೇ ನಿಷ್ಠಾವಂತ ಕಾರ್ಯಕರ್ತರು ಪಕ್ಷಕ್ಕಾಗಿ ಏಕೆ ಬೇಕು ಎಂದು ಪ್ರಶ್ನಿಸಿದ್ದಾರೆ.
ಈ ಸಾರಿ ರಾಜ್ಯದಲ್ಲಿ ವ್ಯಾಪಕವಾಗಿ ಬೀಸುತ್ತಿರುವ ಆಡಳಿತ ವಿರೋಧಿ ಅಲೆಯನ್ನು ಬಳಸಿಕೊಳ್ಳುವುದರಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ತಮ್ಮ ಸ್ವಾರ್ಥದಿಂದ ಹಿಂದೆ ಬಿದ್ದರೇ ಎಂಬ ಅನುಮಾನ ಕಾಡುತ್ತಿದೆ ಎಂದಿದ್ದಾರೆ.
ಸದ್ಯ ಧಾರವಾಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಹಾಗೂ ನನ್ನ ಬೆಂಬಲಿಗರ ಸಭೆ ಕರೆದು ಮುಂದೇನು ಮಾಡಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.