DEHALLI:ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಕಾರ್ಮಿಕ ಸಚಿವರು ಮತ್ತು ಕಾರ್ಮಿಕ ಕಾರ್ಯದರ್ಶಿಗಳ ಎರಡು ದಿನಗಳ ಚಿಂತನ ಶಿಬಿರದಲ್ಲಿ ಸಚಿವ ಸಂತೋಷ್‌ ಲಾಡ್‌*

*ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಕಾರ್ಮಿಕ ಸಚಿವರು ಮತ್ತು ಕಾರ್ಮಿಕ ಕಾರ್ಯದರ್ಶಿಗಳ ಎರಡು ದಿನಗಳ ಚಿಂತನ ಶಿಬಿರದಲ್ಲಿ ಸಚಿವ ಸಂತೋಷ್‌ ಲಾಡ್‌*

ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರದಿಂದ ಹಲವು ಯೋಜನೆ* 
=============
*ಇಎಸ್ ಐ ಆಸ್ಪತ್ರೆಗಳ ಉನ್ನತೀಕರಣಕ್ಕೆ ಕ್ರಮ* *ಗಿಗ್‌ ಕಾರ್ಮಿಕರು, ಸಿನಿ ಕಾರ್ಮಿಕರ ಯೋಜನೆ ವಿವರಿಸಿದ ಸಚಿವರು* 

=======
ನವದೆಹಲಿ, ಜನವರಿ̈ 29: ಕರ್ನಾಟಕ ಸರ್ಕಾರವು ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ತಿಳಿಸಿದರು. 

ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಮಂತ್ರಾಲಯವು ನವದೆಹಲಿಯಲ್ಲಿ ಆಯೋಜಿಸಿದ್ದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಮಿಕ ಸಚಿವರು ಮತ್ತು ಕಾರ್ಮಿಕ ಕಾರ್ಯದರ್ಶಿಗಳ ಎರಡು ದಿನಗಳ ಚಿಂತನ ಶಿಬಿರದಲ್ಲಿ ಮಾತನಾಡಿದರು. 
 
ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ ಹಾಗೂ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣಕ್ಕಾಗಿ ಹೊಸ ಯೋಜನೆ ಜಾರಿ ಮಾಡಿ ಸಾಕಷ್ಟು ಅನುದಾನ ನೀಡಲಾಗುತ್ತಿದೆ. ಇದರಿಂದ ಕಾರ್ಮಿಕರ ಸಾಮಾಜಿಕ ಸ್ಥಿತಿಗತಿ ಸುಧಾರಿಸಿದೆ. ಹೊಸ ಹೊಸ ಯೋಜನೆಗಳಿಂದ ಕಾರ್ಮಿಕರ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಉತ್ತಮವಾಗಲಿದೆ ಎಂದು ಹೇಳಿದರು. 

ಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಇಎಸ್ ಐ ಆಸ್ಪತ್ರೆಗಳ ಉನ್ನತೀಕರಣಕ್ಕೆ ಸಾಕಷ್ಟು ಹಣ ನೀಡಲಾಗುತ್ತಿದೆ. ಈ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಸೌಲಭ್ಯ ಒದಗಿಸಲಾಗಿದೆ. ಪ್ರತಿಯೊಬ್ಬ ಕಾರ್ಮಿಕರಿಗೂ ಉತ್ತಮ ಆರೋಗ್ಯ ರಕ್ಷಣೆ ಸಿಗುವ ಸಿಗುವಂತೆ ನೋಡಿಕೊಳ್ಳಲಾಗಿದೆ. ಯಾವುದಾದರೂ ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳು ಇಲ್ಲದೇ ಇದ್ದಾಗ ರೋಗಿಗಳನ್ನು ಬೇರೆ ಕಡೆಗೆ ರೆಫರ್‌ ಮಾಡಬೇಕಾಗುತ್ತದೆ. ವಿಮೆ ಇದ್ದರೆ ಅವರು ಒಳ್ಳೆಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದರು. 

ಇ ಕಾಮರ್ಸ್‌ ಸಂಸ್ಥೆಗಳ ಜೊತೆ ಕೆಲಸ ಮಾಡುವ ಕಾರ್ಮಿಕರಿಗಾಗಿ ಹೊಸ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿ ಮಾಡಿದ್ದೇವೆ. ಆನ್‌ಲೈನ್‌ ಪ್ಲಾಟ್‌ಫಾರಂಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವಿಮಾ ಯೋಜನೆ ನೀಡುತ್ತಿದ್ದೇವೆ. ಕೋಟ್ಯಂತರ ಆನ್‌ಲೈನ್‌ ವ್ಯವಹಾರ ನಡೆಯುತ್ತಿದೆ. ಇದರಲ್ಲಿ ಕನಿಷ್ಠ ಸುಂಕ ಸಂಗ್ರಹಿಸುತ್ತಿದ್ದೇವೆ. ಅದನ್ನು ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಬಳಸಲಾಗುತ್ತಿದೆ ಎಂದರು. 

ಅಸಂಘಟಿತ ಕಾರ್ಮಿಕರಿಗೆ ಈವರೆಗೆ ಹೆಚ್ಚಿನ ಸೌಲಭ್ಯಗಳು ಇರಲಿಲ್ಲ. ಆದರೆ ನಮ್ಮ ಸರ್ಕಾರ ಅವರಿಗೂ ಒಳ್ಳೆಯ ಯೋಜನೆಗಳನ್ನು ಈಗ ಜಾರಿ ಮಾಡಿದೆ. ಸಿನಿ ಮತ್ತು ಇತರ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೂ ಯೋಜನೆ ಜಾರಿ ಮಾಡಿದ್ದೇವೆ. ಅವರಿಗೆ ಸಾಮಾಜಿಕ ಭದ್ರತಾ ಯೋಜನೆ ಮತ್ತು ವಿಮೆ ನೀಡುತ್ತಿದ್ದೇವೆ. ಸಾರಿಗೆ ಮಂಡಳಿ ಮೂಲಕ ವಾಹನಗಳ ಖರೀದಿ ವೇಳೆ ಸೆಸ್‌ ಸಂಗ್ರಹಿಸಿ ಆಟೋಮೊಬೈಲ್‌ ಉದ್ಯಮಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ನೀಡುತ್ತಿದ್ದೇವೆ. ಇದನ್ನು ಇತರ ರಾಜ್ಯಗಳೂ ಅಳವಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು. 

ಶಿಬಿರದಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಮನ್ಸುಕ್‌ ಮಾಂಡವೀಯ,  ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಮತ್ತು ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಮಿಕ ಸಚಿವರು ಮತ್ತು ಕಾರ್ಯದರ್ಶಿಗಳು ಭಾಗವಹಿಸಿದ್ದರು.

ನವೀನ ಹಳೆಯದು

نموذج الاتصال