ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ -- ಕಾರ್ಮಿಕ ಸಚಿವರಿಂದ ಸಭೆ.
ಬೆಂಗಳೂರು, ಮಾರ್ಚ್ 27: ರಾಜ್ಯದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆಗಳನ್ನು ಆರಂಭಿಸುವ ಕುರಿತಂತೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಹಲವಾರು ಸೌಲಭ್ಯಗಳನ್ನು ನೋಂದಾಯಿತ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ನೀಡಲಾಗುತ್ತಿದೆ. ಕಾರ್ಮಿಕರ ಮಕ್ಕಳಿಗೆ ಈಗಾಗಲೇ ಶೈಕ್ಷಣಿಕ ಸಹಾಯಧನ ಸೇರಿದಂತೆ ಹಲವು ಅನುಕೂಲಗಳನ್ನು ಒದಗಿಸಲಾಗುತ್ತಿದೆ. ಇದೀಗ ವಸತಿ ಶಾಲೆ ಸೌಲಭ್ಯ ಸಹ ರಾಜ್ಯದ ಲಕ್ಷಾಂತರ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಾಧನೆಗೆ ಹೊಸ ಭರವಸೆ ತುಂಬಲಿದೆ.
ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಎನ್ ವಿ ಪ್ರಸಾದ್, ಕಾರ್ಮಿಕ ಆಯುಕ್ತರಾದ ಡಾ. ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಶ್ರೀಮತಿ ಭಾರತಿ ಡಿ, ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.